ಆರೋಗ್ಯಇತ್ತೀಚಿನ ಸುದ್ದಿ

ಕರ್ನಾಟಕ ಸರ್ಕಾರದಿಂದ ಕೋವಿಡ್ ಮಾರ್ಗಸೂಚಿ ಬಿಡುಗಡೆ

ಬೆಂಗಳೂರು: ಕೊರೊನಾ ವೈರಸ್​​ನ ಜೆಎನ್​​1 ರೂಪಾಂತರಿಯಿಂದಾಗಿ  ಕೋವಿಡ್-19 ಸೋಂಕು ಹರಡುವಿಕೆ ತೀವ್ರಗೊಳ್ಳುವ ಸಾಧ್ಯತೆ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಮಂಗಳವಾರ ಮಾರ್ಗಸೂಚಿ  ಬಿಡುಗಡೆ ಮಾಡಿದೆ. ಕೇರಳ ಹಾಗೂ ತಮಿಳುನಾಡು ರಾಜ್ಯಕ್ಕೆ ಹೊಂದಿಕೊಂಡ ಗಡಿ ಭಾಗದಲ್ಲಿ ತಪಾಸಣೆ ಹೆಚ್ಚಳ ಮಾಡಲು ಮಾರ್ಗಸೂಚಿಯಲ್ಲಿ ಉಲ್ಲೇಖಿಸಲಾಗಿದೆ. ಗಡಿ ಜಿಲ್ಲೆಗಳಲ್ಲಿ ಕೋವಿಡ್ ಪರೀಕ್ಷೆ ಹೆಚ್ಚಿಸಿ ವರದಿಯನ್ನು ಇಲಾಖೆಗೆ ಸಲ್ಲಿಸಲು ಸೂಚನೆ ನೀಡಲಾಗಿದೆ. ತೀವ್ರ ಶ್ವಾಸಕೋಶ ಹಾಗೂ ಉಸಿರಾಟದ ಸಮಸ್ಯೆ ಇರುವವರನ್ನು ಕೋವಿಡ್ ತಪಾಸಣೆಗೆ ಒಳಪಡಿಸಲು ಸೂಚಿಸಲಾಗಿದೆ.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಆಯುಕ್ತ ರಂದಿಪ್ ಅವರು ಮಾರ್ಗಸೂಚಿ ಬಿಡುಗಡೆ ಮಾಡಿದ್ದು, ಸದ್ಯಕ್ಕೆ ಯಾವುದೇ ರೀತಿಯ ನಿರ್ಬಂಧ ವಿಧಿಸುವುದಿಲ್ಲ ಎಂದು ತಿಳಿಸಿದ್ದಾರೆ. ಕೋವಿಡ್ – 19 ರಾಜ್ಯ ತಾಂತ್ರಿಕ ಸಲಹಾ ಸಮಿತಿ 202ನೇ ಸಭೆಯ ಶಿಫಾರಸಿನ ಅನ್ವಯ ಈ ಮಾರ್ಗಸೂಚಿ ಬಿಡುಗಡೆ ಮಾಡಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಕೋವಿಡ್ ಮಾರ್ಗಸೂಚಿಯಲ್ಲಿ ಏನೇನಿದೆ?

  • ಕೇರಳ, ತಮಿಳುನಾಡು ರಾಜ್ಯಗಳ ಗಡಿ ಭಾಗದಲ್ಲಿ ತಪಾಸಣೆ ಹೆಚ್ಚಳ
  • ಕೊವಿಡ್‌ ನಿರ್ಬಂಧ ಅವಶ್ಯಕತೆ ಇಲ್ಲ
  • ಗಡಿ ಜಿಲ್ಲೆಗಳಲ್ಲಿ ಅಗತ್ಯ ಸಂಖ್ಯೆಯ ಪರೀಕ್ಷೆಗಳನ್ನು ಹೆಚ್ಚಿಸಬೇಕು
  • ಗಡಿ ಜಿಲ್ಲೆಗಳ ಕೋವಿಡ್ ಪರೀಕ್ಷಾ ವರದಿಯನ್ನು ಆರೋಗ್ಯ ಇಲಾಖೆಗೆ ಸಲ್ಲಿಸಲು ಜಿಲ್ಲಾಡಳಿತಗಳಿಗೆ ಸೂಚನೆ
  • ತೀವ್ರ ಶ್ವಾಸಕೋಶ, ಉಸಿರಾಟದ ಸಮಸ್ಯೆ ಇರುವವರನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಬೇಕು
  • ರೋಗ ಲಕ್ಷಣ ಇರುವವರನ್ನು ಕೊವಿಡ್‌ ಪರಿಶೀಲನೆಗೆ ಒಳಪಡಿಸಬೇಕು
  • ಸರ್ಕಾರಿ, ಖಾಸಗಿ ಆಸ್ಪತ್ರೆಗಳಲ್ಲಿ ಪ್ರತ್ಯೇಕ ಕೊಠಡಿ ಸ್ಥಾಪನೆಗೆ ಸೂಚನೆ
  • ಡಿ.3, 4ನೇ ವಾರದಲ್ಲಿ ಮಾಕ್ ಡ್ರಿಲ್‌ ಮುಕ್ತಾಯಗೊಳಿಸಲು ಸೂಚನೆ
  • ಎಲ್ಲಾ ಹಿರಿಯ ನಾಗರೀಕರು (60 ವರ್ಷ ಹಾಗೂ ಮೇಲ್ಪಟ್ಟವರು), ಇತರ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿರುವವರು (ವಿಶೇಷವಾಗಿ ಕಿಡ್ನಿ, ಹೃದಯ, ಲಿವರ್ ಸಮಸ್ಯೆಗಳು), ಗರ್ಭಿಣಿಯರು, ಎದೆ ಹಾಲುಣಿಸುವ ತಾಯಂದಿರು, ಹೊರಾಂಗಣ ಪ್ರದೇಶಗಳಿಗೆ ತೆರಳಿದಾಗ ಮಾಸ್ಕ್ ಧರಿಸಬೇಕು.
  • ಅಗತ್ಯ ಗಾಳಿ-ಬೆಳಕಿನ ವ್ಯವಸ್ಥೆಯಿಲ್ಲದ ಮತ್ತು ಹೆಚ್ಚು ಜನಸಂದಣಿಯಿರುವ ಪ್ರದೇಶಗಳಿಗೆ ತೆರಳದಿರುವುದು ಸೂಕ್ತ.
  • ಜ್ವರ, ಕೆಮ್ಮು, ನೆಗಡಿ, ಇತ್ಯಾದಿ ಉಸಿರಾಟದ ಸೋಂಕಿನ ಲಕ್ಷಣಗಳನ್ನು ಹೊಂದಿದವರು ತಕ್ಷಣವೇ ಅಗತ್ಯ ವೈದ್ಯಕೀಯ ಸಲಹೆಯನ್ನು ಪಡೆಯಬೇಕು.
  • ಮೂಗು ಹಾಗೂ ಬಾಯಿ ಮುಚ್ಚುವಂತೆ ಮಾಸ್ಕ್ ಧರಿಸುವುದು, ಅಗತ್ಯ ಗಾಳಿ-ಬೆಳಕಿನ ವ್ಯವಸ್ಥೆಯಿಲ್ಲದ ಮತ್ತು ಹೆಚ್ಚು ಜನಸಂದಣಿಯಿರುವ ಪ್ರದೇಶಗಳಿಗೆ ಭೇಟಿ ನೀಡದಿರುವುದು ಸೂಕ್ತವಾಗಿದೆ
  • ಉತ್ತಮ ವೈಯಕ್ತಿಕ ಸ್ವಚ್ಛತೆ, ಆಗಾಗ್ಗೆ ಕೈಗಳನ್ನು ಸೋಪು ಹಾಗೂ ನೀರಿನಿಂದ ತೊಳೆದುಕೊಳ್ಳುವುದು, ಇತ್ಯಾದಿಗಳ ಪಾಲನೆಯು ಅಗತ್ಯವಾಗಿದೆ
  • ಆರೋಗ್ಯ ಸಮಸ್ಯೆಗಳು ಕಂಡುಬಂದಲ್ಲಿ, ಮನೆಯಲ್ಲಿರುವುದು ಸೂಕ್ತ. ಇತರ ವ್ಯಕ್ತಿಗಳೊಂದಿಗೆ, ವಿಶೇಷವಾಗಿ ಹಿರಿಯ ನಾಗರೀಕರು / ದುರ್ಬಲರನ್ನು (vulnerable) ಅವಶ್ಯವಿದ್ದಲ್ಲಿ, ಮಾತ್ರವೇ ಭೇಟಿ ಮಾಡುವುದು.
  • ಆರೋಗ್ಯ ಸಮಸ್ಯೆಗಳನ್ನು ಹೊಂದಿದವರು, ಜನಸಂದಣಿಯ ಪ್ರದೇಶಗಳಿಗೆ ಭೇಟಿ ನೀಡಬೇಕಾದ ಸಂದರ್ಭದಲ್ಲಿ ಮಾಸ್ಕ್ ಧರಿಸುವಂತೆ ಸಲಹೆ
  • ಅಂತರ ರಾಷ್ಟ್ರೀಯ ಪ್ರಯಾಣದ ಸಂದರ್ಭದಲ್ಲಿ ಎಚ್ಚರಿಕೆಯಿಂದಿದ್ದು, ವಿಮಾನ ನಿಲ್ದಾಣದಲ್ಲಿ ಹಾಗೂ ವಿಮಾನದ ಒಳಗೆ ಮಾಸ್ ಧರಿಸುವುದು ಹೆಚ್ಚಿನ ಗಾಳಿ-ಬೆಳಕು ಇಲ್ಲವ ಮತ್ತು ಜನದಟ್ಟಣೆ ಇರುವ ಸ್ಥಳಗಳಿಗೆ ತೆರಳದಿರುವುದೂ ಸೇರಿದಂತೆ ಇತರ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಪಾಲಿಸುವುದು ಸೂಕ್ತವಾಗಿದೆ.

ಎರಡು ಪ್ರತ್ಯೇಕ ಮಾರ್ಗಸೂಚಿ

ಕೋವಿಡ್ ಬಗ್ಗೆ ಎರಡು ಪ್ರತ್ಯೇಕ ಮಾರ್ಗಸೂಚಿಗಳನ್ನು ರಾಜ್ಯ ಆರೋಗ್ಯ ಇಲಾಖೆ ಬಿಡುಗಡೆ ಮಾಡಿದೆ. ಒಂದು ಎಲ್ಲಾ ಜಿಲ್ಲೆಯ ಜಿಲ್ಲಾಧಿಕಾರಿ, ಸಿಇಒ ಹಾಗೂ ಜಿಲ್ಲಾ ಆರೋಗ್ಯಾಧಿಕಾರಿಗಳಿಗೆ ಆಗಿದ್ದರೆ ಮತ್ತೊಂದು ಸಾರ್ವಜನಿಕ ಸಲಹಾ ಮಾರ್ಗಸೂಚಿಯಾಗಿದೆ. ಜಿಲ್ಲಾಧಿಕಾರಿ, ಸಿಇಒ ಹಾಗೂ ಜಿಲ್ಲಾ ಆರೋಗ್ಯಾಧಿಕಾರಿಗಳಿಗೆ ಕೋವಿಡ್ ಸರ್ವೇಕ್ಷಣೆ ಹಾಗೂ ಮೇಲುಸ್ತುವಾರಿ ಕೈಗೊಳ್ಳುವ ನಿಟ್ಟಿನಲ್ಲಿ ಸುತ್ತೋಲೆ ಹೊರಡಿಸಲಾಗಿದೆ. ಮತ್ತೊಂದಡೆ, ಕೋವಿಡ್ ಹೆಚ್ಚಳ ಆಗುತ್ತಿರುವ ಕಾರಣ ಸಾರ್ವಜನಿಕರಿಗೆ ಪ್ರತ್ಯೇಕ ಮಾರ್ಗಸೂಚಿ ಬಿಡುಗಡೆ ಮಾಡಲಾಗಿದೆ.

Related Articles

Leave a Reply

Your email address will not be published. Required fields are marked *

Back to top button