ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಮಾವೇಶ: ಶಾಸಕ ಕೆ.ಎಂ. ಉದಯ್

ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಮಾವೇಶಕ್ಕೆ ತಾಲೂಕು ಆಡಳಿತ ಸಕಲ ಸಿದ್ಧತೆ ಮಾಡಿಕೊಂಡಿದೆ ಎಂದು ಶಾಸಕ ಕೆ.ಎಂ. ಉದಯ್ ಹೇಳಿದರು.
ಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಫೆ. 11ರ ಬೆಳಿಗ್ಗೆ 10 ಗಂಟೆಗೆ ಮದ್ದೂರು ತಾಲೂಕು ಕ್ರೀಡಾಂಗಣದಲ್ಲಿ ಬೃಹತ್ ಸಮಾವೇಶವನ್ನು ಆಯೋಜಿಸಲಾಗಿದೆ ಎಂದರು.
ಸಮಾವೇಶದಲ್ಲಿ ಕೃಷಿ, ತೋಟಗಾರಿಕೆ, ರೇಷ್ಮೆ, ಆರೋಗ್ಯ, ನರೇಗಾ, ಸ್ವ ಸಹಾಯ ಸಂಘ ಸೇರಿದಂತೆ ಇನ್ನಿತರ ಮಳಿಗೆಗಳನ್ನು ತೆರೆಯಲಾಗುತ್ತಿದೆ. ಸಮಾವೇಶ ನಡೆಯುವ ಸ್ಥಳದಲ್ಲಿ ಬೃಹತ್ ಆರೋಗ್ಯ ಶಿಬಿರ ಹಮ್ಮಿಕೊಳ್ಳಲಾಗಿದೆ ಎಂದರು.
ಸಮಾವೇಶದಲ್ಲಿ 10,000ಕ್ಕೂ ಹೆಚ್ಚು ಮಂದಿ ಭಾಗವಹಿಸುವ ನಿರೀಕ್ಷೆ ಇದ್ದು ಎಲ್ಲರಿಗೂ ಊಟ, ಕುಡಿಯುವ ನೀರು, ಮಜ್ಜಿಗೆ ವ್ಯವಸ್ಥೆ ಮಾಡಲಾಗಿದೆ ಎಂದರು.
ಸಮಾವೇಶಕ್ಕೆ ಬರುವ ಸಾರ್ವಜನಿಕರಿಗೆ ಪ್ರತಿ ಪಂಚಾಯತಿ ವ್ಯಾಪ್ತಿಗೂ ಕೂಡ ಬಸ್ಸಿನ ಸೌಲಭ್ಯ ಕಲ್ಪಿಸಲಾಗಿದೆ. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಸಮಾವೇಶದಲ್ಲಿ ಭಾಗವಹಿಸಿ, ಸರ್ಕಾರದ ಸೌಲಭ್ಯಗಳ ಮಾಹಿತಿಯನ್ನು ಪಡೆದುಕೊಳ್ಳಬೇಕು ಎಂದು ಮನವಿ ಮಾಡಿದರು.
ಸಮಾವೇಶದಲ್ಲಿ ವಿವಿಧ ಇಲಾಖೆಗಳ ಫಲಾನುಭವಿಗಳಿಗೆ ವಿವಿಧ ಸವಲತ್ತುಗಳನ್ನು ವಿತರಿಸಲಾಗುವುದು. ಸಮಾವೇಶದಲ್ಲಿ ಸಚಿವ ಎನ್. ಚಲುವರಾಯಸ್ವಾಮಿ ಮತ್ತು ಜಿಲ್ಲೆಯ ಎಲ್ಲಾ ಶಾಸಕರು ಮತ್ತು ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಭಾಗವಹಿಸಲಿದ್ದಾರೆ ಎಂದರು.
ನನ್ನ ಅಧಿಕಾರ ಅವಧಿಯಲ್ಲಿ ಮಾದರಿ ಮದ್ದೂರು ನಿರ್ಮಾಣ ಮಾಡುವುದೇ ನನ್ನ ಗುರಿಯಾಗಿದ್ದು, 3000 ಕೋಟಿಗೂ ಅಧಿಕ ಅನುದಾನ ತಂದು ಕ್ಷೇತ್ರವನ್ನು ಅಭಿವೃದ್ಧಿಪಡಿಸುವ ಇಂಗಿತ ಹೊಂದಿದ್ದೇನೆ. ಈಗಾಗಲೇ ಮದ್ದೂರು ವಿಧಾನಸಭಾ ಕ್ಷೇತ್ರಕ್ಕೆ ಕಾಂಗ್ರೆಸ್ ಸರ್ಕಾರ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ 300 ಕೋಟಿ ಅನುದಾನವನ್ನು ಬಿಡುಗಡೆ ಮಾಡಿದೆ ಎಂದರು.