ಜಿಲ್ಲೆಯಲ್ಲಿ ಆರು ವಿದ್ಯುತ್ ಉಪಕೇಂದ್ರಗಳ ಸ್ಥಾಪನೆ : ಇಂಧನ ಸಚಿವರಾದ ಕೆ.ಜೆ. ಜಾರ್ಜ್
ಚಾಮರಾಜನಗರ: ಚಾಮರಾಜನಗರ ಜಿಲ್ಲೆಯಲ್ಲಿ ಆರು ಹೊಸ ವಿದ್ಯುತ್ ಉಪಕೇಂದ್ರಗಳ ಸ್ಥಾಪನೆಗೆ ಕ್ರಮವಹಿಸಲಾಗಿದೆ ಎಂದು ಇಂಧನ ಸಚಿವರಾದ ಕೆ.ಜೆ. ಜಾರ್ಜ್ ಅವರು ಹೇಳಿದರು.
ನಗರದ ಜಿಲ್ಲಾ ಪಂಚಾಯತ್ ಕೆ.ಡಿ.ಪಿ ಸಭಾಂಗಣದಲ್ಲಿಂದು ಇಂಧನ ಇಲಾಖೆಗೆ ಸಂಬಂಧಿಸಿದಂತೆ ಜಿಲ್ಲೆಯ ಜನಪ್ರತಿನಿಧಿ
ಗಳೊಂದಿಗೆ ಪ್ರಗತಿ ಪರಿಶೀಲಿಸಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದರು.
ಜಿಲ್ಲೆಯಲ್ಲಿ 400 ಕೆ.ವಿ. ವಿದ್ಯುತ್ ಉಪಕೇಂದ್ರ ಸೇರಿದಂತೆ ಒಟ್ಟು ಆರು ಹೊಸ ವಿದ್ಯುತ್ ಉಪಕೇಂದ್ರಗಳನ್ನು ಸ್ಥಾಪಿಸಲಾಗುತ್ತಿದೆ. ಜಿಲ್ಲಾಧಿಕಾರಿಗಳು ಹಾಗೂ ಚೂಡಾ ಅಧ್ಯಕ್ಷರು ಸಭೆಯಲ್ಲಿ ಮನವಿ ಮಾಡಿದ ಮೇರೆಗೆ ಜಿಲ್ಲಾ ಕೇಂದ್ರದ ಬಿ. ರಾಚಯ್ಯ ಜೋಡಿ ರಸ್ತೆಗೆ ಎಲ್.ಇ.ಡಿ ಬಲ್ಬ್‍ಗಳನ್ನು ಕೆ.ಪಿ.ಟಿ.ಸಿ.ಎಲ್ ನ ಸಿ.ಎಸ್.ಆರ್ ಫಂಡ್‍ನಿಂದ ಅಳವಡಿಸಲು ಅಗತ್ಯ ಕ್ರಮ ತೆಗೆದುಕೊಳ್ಳಲಾಗುತ್ತದೆ ಎಂದರು.
ಅಕ್ರಮ ಸಕ್ರಮ ಯೋಜನೆಯಡಿ ಇರುವ ಅರ್ಜಿಗಳ ವಿಲೇವಾರಿಗೆ ಕ್ರಮವಹಿಸಲಾಗಿದೆ. ಮೊದಲ ಆದ್ಯತೆ ಮೇರೆಗೆ 1,500 ಅರ್ಜಿಗಳನ್ನು ತೆಗೆದುಕೊಳ್ಳಲಿದ್ದೇವೆ. ಇನ್ನೂ ಎರಡು ವರ್ಷದೊಳಗೆ ಬಾಕಿ ಇರುವ ಎಲ್ಲ ಅರ್ಜಿಗಳನ್ನು ಪೂರ್ಣಗೊಳಿಸಲಿದ್ದೇವೆ ಹೇಳಿದರು.
ಕುಸುಂ ಬಿ ಯೋಜನೆಯಡಿ ಸೋಲಾರ್ ಪಂಪ್‍ಸೆಟ್‍ಗಳಿಗೆ ಶೇ. 80ರಷ್ಟು ಸಬ್ಸಿಡಿ ನೀಡಲಾಗುತ್ತಿದೆ. ಈಗಾಗಲೇ ಜಿಲ್ಲೆಯಲ್ಲಿ 350 ಅರ್ಜಿಗಳನ್ನು ಸ್ವೀಕರಿಸಲಾಗಿದೆ. ಸೋಲಾರ್ ಮೂಲಕ ವಿದ್ಯುತ್ ಉತ್ಪಾದನೆಗೆ ಕ್ರಮ ತೆಗೆದುಕೊಳ್ಳಲಾಗಿದ್ದು, ಕುಸುಂ ಬಿ, ಕುಸುಂ ಸಿ ಯೋಜನೆಯಡಿ ಸೋಲಾರ್ ಮೂಲಕ 3000 ಮೆಗಾವ್ಯಾಟ್ ವಿದ್ಯುತ್ ಉತ್ಪಾದಿಸಿ ಪಂಪ್‍ಸೆಟ್‍ಗಳಿಗೆ ಪೂರೈಕೆ ಮಾಡಲಾಗುತ್ತದೆ. ನಿರ್ವಹಣೆ ಕೆಲಸಗಳಿಗಾಗಿ ಸಾಕಷ್ಟು ಹಣ ಇಡಲಾಗಿದೆ ಎಂದರು.
ರಾಜ್ಯದಲ್ಲಿ 2500 ಲೈನ್‍ಮ್ಯಾನ್‍ಗಳನ್ನು ನೇಮಕ ಮಾಡಿಕೊಳ್ಳುವ ಸಂದರ್ಶನವನ್ನು ಒಂದೇ ದಿನದಲ್ಲಿ ಮಾಡಲಾಗುತ್ತದೆ. ಈ ಹಿಂದೆ ಬೇರೆ ಬೇರೆ ದಿನಗಳಲ್ಲಿ ಬೇರೆ ಬೇರೆ ಜಿಲ್ಲೆಗಳಲ್ಲಿ ನೇಮಕಾತಿ ಪ್ರಕ್ರಿಯೆ ನಡೆಯುತ್ತಿತ್ತು. ಹುದ್ದೆಗಳು ಖಾಲಿ ಉಳಿಯದಂತೆ ಏಕಕಾಲದಲ್ಲಿ ನೇಮಕಾತಿ ಪ್ರಕ್ರಿಯೆಯನ್ನು ಕೈಗೊಳ್ಳುವ ಮಹತ್ವದ ತೀರ್ಮಾನ ಮಾಡಲಾಗಿದೆ ಎಂದು ಸಚಿವರಾದ ಕೆ.ಜೆ. ಜಾರ್ಜ್ ಅವರು ತಿಳಿಸಿದರು.
ಕೆ.ಪಿ.ಟಿ.ಸಿ.ಎಲ್ ನ ವ್ಯವಸ್ಥಾಪಕ ನಿರ್ದೇಶಕರಾದ ಪಂಕಜ್ ಕುಮಾರ್ ಪಾಂಡೆ ಅವರು ಮಾತನಾಡಿ ಕಳೆದ ವರ್ಷ ಸಿವಿಲ್ ಎಲೆಕ್ಟ್ರಿಕಲ್ ಎಂಜಿನಿಯರ್‍ಗಳನ್ನು ಪಾರದರ್ಶಕ ಪ್ರಕ್ರಿಯೆ ಅನುಸರಿಸಿ ನೇಮಕ ಮಾಡಿಕೊಂಡಿದ್ದೇವೆ. ಈ ಬಾರಿಯು ಹುದ್ದೆಗಳ ನೇಮಕಕ್ಕೆ ಕ್ರಮ ತೆಗೆದುಕೊಳ್ಳುತ್ತಿದ್ದೇವೆ ಎಂದರು ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಅವರು ಮಾತನಾಡಿ 42 ಕೋಟಿ ರೂ. ವೆಚ್ಚದಲ್ಲಿ ಚಾಮರಾಜನಗರ ಹನೂರು ತಾಲೂಕಿನ ಹಾಡಿ, ಪೋಡುಗಳಿಗೆ ವಿದ್ಯುತ್ ಸಂಪರ್ಕ ಒದಗಿಸುವ ಯೋಜನೆಗೆ ಇದೇ ನವೆಂಬರ್ 26ರಂದು ಚಾಲನೆ ನೀಡಲಾಗುತ್ತದೆ ಎಂದು ತಿಳಿಸಿದರು.
ಸಭೆಯಲ್ಲಿ ಶಾಸಕರಾದ ಸಿ. ಪುಟ್ಟರಂಗಶೆಟ್ಟಿ, ಎ.ಆರ್. ಕೃಷ್ಣಮೂರ್ತಿ, ಹೆಚ್.ಎಂ. ಗಣೇಶ್ ಪ್ರಸಾದ್, ಎಂ.ಆರ್. ಮಂಜುನಾಥ್, ಡಾ. ಡಿ. ತಿಮ್ಮಯ್ಯ, ಕೆ. ವಿವೇಕಾನಂದ, ಕಾಡಾ ಅಧ್ಯಕ್ಷರಾದ ಪಿ. ಮರಿಸ್ವಾಮಿ, ಉಗ್ರಾಣ ನಿಗಮದ ಅಧ್ಯಕ್ಷರಾದ ಎಸ್. ಜಯಣ್ಣ, ಚೂಡಾ ಅಧ್ಯಕ್ಷರಾದ ಮಹಮ್ಮದ್ ಅಸ್ಗರ್ ಮುನ್ನಾ, ಕೆ.ಪಿ.ಟಿ.ಸಿ.ಎಲ್ ನ ವ್ಯವಸ್ಥಾಪಕ ನಿರ್ದೇಶಕರಾದ ಪಂಕಜ್ ಕುಮಾರ್ ಪಾಂಡೆ, ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮದ ವ್ಯವಸ್ಥಾಪಕ ನಿರ್ದೇಶಕರಾದ ಶೀಲ, ಜಿಲ್ಲಾಧಿಕಾರಿ ಶಿಲ್ಪಾ ನಾಗ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮೋನಾ ರೋತ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಬಿ.ಟಿ. ಕವಿತಾ, ಸೆಸ್ಕ್ ನ ತಾಂತ್ರಿಕ ನಿರ್ದೇಶಕರಾದ ಮುನಿಗೋಪಾಲ್‍ರಾಜ್, ಮುಖ್ಯ ಎಂಜಿನಿಯರ್ ದಿವಾಕರ್, ಅಧೀಕ್ಷಕ ಎಂಜಿನಿಯರ್ ತಾರ, ಇನ್ನಿತರ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.