ಕ್ರೀಡೆ

ಚಾಂಪಿಯನ್ಸ್ ಟ್ರೋಫಿ ಪ್ರಶಸ್ತಿ ಸಮಾರಂಭಕ್ಕೆ PCB ಗೈರು..!

Champions Trophy 2025: ಚಾಂಪಿಯನ್ಸ್ ಟ್ರೋಫಿಯ ಫೈನಲ್ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ನ್ಯೂಝಿಲೆಂಡ್ ತಂಡವು 50 ಓವರ್​ಗಳಲ್ಲಿ 7 ವಿಕೆಟ್ ಕಳೆದುಕೊಂಡು 251 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಟೀಮ್ ಇಂಡಿಯಾ ಪರ ರೋಹಿತ್ ಶರ್ಮಾ ಆಕರ್ಷಕ ಅರ್ಧಶತಕ ಬಾರಿಸಿದ್ದರು. ಈ ಅರ್ಧಶತಕದ ನೆರವಿನಿಂದ ಭಾರತ ತಂಡವು 49 ಓವರ್​ಗಳಲ್ಲಿ 254 ರನ್ ಬಾರಿಸಿ 4 ವಿಕೆಟ್​ಗಳ ಗೆಲುವು ದಾಖಲಿಸಿದೆ.ದುಬೈ ಇಂಟರ್​ನ್ಯಾಷನಲ್ ಸ್ಟೇಡಿಯಂನಲ್ಲಿ ನಡೆದ ಚಾಂಪಿಯನ್ಸ್ ಟ್ರೋಫಿಯ ಫೈನಲ್ ಪಂದ್ಯದಲ್ಲಿ ಟೀಮ್ ಇಂಡಿಯಾ ಜಯಭೇರಿ ಬಾರಿಸಿದೆ. ಅಂತಿಮ ಪಂದ್ಯದಲ್ಲಿ ನ್ಯೂಝಿಲೆಂಡ್ ತಂಡವನ್ನು 4 ವಿಕೆಟ್​ಗಳಿಂದ ಸೋಲಿಸಿ ಟೀಮ್ ಇಂಡಿಯಾ ಚಾಂಪಿಯನ್ ಪಟ್ಟ ಅಲಂಕರಿಸಿದೆ. ಹೀಗೆ ಚಾಂಪಿಯನ್ ಪಟ್ಟಕ್ಕೇರಿದ ಟೀಮ್ ಇಂಡಿಯಾಗೆ ಪ್ರಶಸ್ತಿಗಳನ್ನು ಪ್ರಧಾನ ಮಾಡಿದ್ದು ಬಿಸಿಸಿಐ ಅಧ್ಯಕ್ಷ ರೋಜರ್ ಬಿನ್ನಿ ಹಾಗೂ ಐಸಿಸಿ ಅಧ್ಯಕ್ಷ ಜಯ್ ಶಾ ಎಂಬುದು ವಿಶೇಷ. ಆದರೆ ಚಾಂಪಿಯನ್ಸ್ ಟ್ರೋಫಿ ಆಯೋಜಿಸಿದ ಪಾಕಿಸ್ತಾನ್ ಕ್ರಿಕೆಟ್ ಬೋರ್ಡ್​ನ ಯಾವುದೇ ಅಧಿಕಾರಿ ಸಮಾರೋಪ ಸಮಾರಂಭದ ವೇಳೆ ಕಾಣಿಸಿಕೊಂಡಿಲ್ಲ ಎಂಬುದೇ ಅಚ್ಚರಿ.ಸಾಮಾನ್ಯವಾಗಿ ಐಸಿಸಿ ಟೂರ್ನಿಯ ಅಂತಿಮ ಪಂದ್ಯದ ವೇಳೆ ಆಯೋಜಕ ಕ್ರಿಕೆಟ್ ಮಂಡಳಿ ಹಾಗೂ ಐಸಿಸಿ ಅಧ್ಯಕ್ಷರು ಕಾಣಿಸಿಕೊಳ್ಳುವುದು ವಾಡಿಕೆ. ಇದಾಗ್ಯೂ ಈ ಬಾರಿಯ ಚಾಂಪಿಯನ್ಸ್ ಟ್ರೋಫಿ ಟೂರ್ನಿಯ ಆಯೋಜಕರಾದ ಪಾಕಿಸ್ತಾನ್ ಕ್ರಿಕೆಟ್ ಮಂಡಳಿಯ ಅಧ್ಯಕ್ಷರಾದ ಮೊಹ್ಸಿನ್ ನಖ್ವಿ ಆಗಲಿ, ಇತರೆ ಸದಸ್ಯರಾಗಲಿ ಕಾಣಿಸಿಕೊಂಡಿಲ್ಲ. ಇದುವೇ ಈಗ ಹೊಸ ಚರ್ಚೆಯನ್ನು ಹುಟ್ಟುಹಾಕಿದೆ.ಈ ಬಾರಿಯ ಚಾಂಪಿಯನ್ಸ್ ಟ್ರೋಫಿಯನ್ನು ಪಾಕಿಸ್ತಾನ್ ಕ್ರಿಕೆಟ್ ಮಂಡಳಿ ಆಯೋಜಿಸಿದರೂ ಫೈನಲ್ ಪಂದ್ಯ ನಡೆದಿದ್ದು ದುಬೈನಲ್ಲಿ ಎಂಬುದು ವಿಶೇಷ. ಅಂದರೆ ಭಾರತ ತಂಡ ಪಾಕಿಸ್ತಾನಕ್ಕೆ ತೆರಳದಿರುವ ಕಾರಣ ಚಾಂಪಿಯನ್ಸ್ ಟ್ರೋಫಿಯನ್ನು ಹೈಬ್ರಿಡ್ ಮಾದರಿಯಲ್ಲಿ ಆಯೋಜಿಸಲಾಗಿತ್ತು.ಅದರಂತೆ ಟೀಮ್ ಇಂಡಿಯಾ ಪಂದ್ಯಗಳಿಗೆ ದುಬೈ ಇಂಟರ್​ನ್ಯಾಷನಲ್ ಕ್ರಿಕೆಟ್ ಸ್ಟೇಡಿಯಂ ಆತಿಥ್ಯವಹಿಸಿತ್ತು. ಅಲ್ಲದೆ ಭಾರತ ತಂಡ ಫೈನಲ್​ಗೆ ತಲುಪಿದರೆ ದುಬೈನಲ್ಲಿ ಅಂತಿಮ ಪಂದ್ಯ, ಇಲ್ಲದಿದ್ದರೆ ಲಾಹೋರ್​ನಲ್ಲಿ ಫೈನಲ್​ ಪಂದ್ಯ ಆಯೋಜಿಸಲು ನಿರ್ಧರಿಸಲಾಗಿತ್ತು.ಆದರೆ ಪಾಕಿಸ್ತಾನ್ ಕ್ರಿಕೆಟ್ ಮಂಡಳಿಯ ಲೆಕ್ಕಾಚಾರಗಳು ಇಲ್ಲೇ ತಲೆಕೆಳಗಾದವು. ಟೀಮ್ ಇಂಡಿಯಾ ತನ್ನೆಲ್ಲಾ ಪಂದ್ಯಗಳನ್ನು ಗೆದ್ದು ಫೈನಲ್​ಗೆ ಲಗ್ಗೆಯಿಟ್ಟಿತು. ಇತ್ತ 29 ವರ್ಷಗಳ ಬಳಿಕ ಐಸಿಸಿ ಟೂರ್ನಿ ಆಯೋಜಿಸಿದ್ದ ಪಾಕಿಸ್ತಾನ್ ಕ್ರಿಕೆಟ್ ಮಂಡಳಿಗೆ ಫೈನಲ್ ಪಂದ್ಯದ ಆತಿಥ್ಯ ಕೈ ತಪ್ಪಿದೆ.ಅದರಂತೆ ಮಾರ್ಚ್ 9 ರಂದು ನಡೆದ ಫೈನಲ್ ಪಂದ್ಯಕ್ಕೆ ದುಬೈ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂ ಆತಿಥ್ಯವಹಿಸಿತು. ಈ ಪಂದ್ಯದಲ್ಲಿ ನ್ಯೂಝಿಲೆಂಡ್ ತಂಡವನ್ನು ಬಗ್ಗು ಬಡಿದು ಟೀಮ್ ಇಂಡಿಯಾ ಚಾಂಪಿಯನ್ ಪಟ್ಟ ಅಲಂಕರಿಸಿದೆ.ಇತ್ತ ಫೈನಲ್ ಪಂದ್ಯದ ಆಯೋಜನೆ ಕೈ ತಪ್ಪಿದ ಬೇಸರದಲ್ಲಿ ಪಾಕಿಸ್ತಾನ್ ಕ್ರಿಕೆಟ್ ಮಂಡಳಿಯ ಅಧ್ಯಕ್ಷರು ಸಮಾರೋಪ ಸಮಾರಂಭದಲ್ಲಿ ಕಾಣಿಸಿಕೊಂಡಿಲ್ಲ ಎಂದು ಹೇಳಲಾಗುತ್ತಿದೆ. ಅಲ್ಲದೆ ಪಾಕಿಸ್ತಾನ್ ಕ್ರಿಕೆಟ್ ಮಂಡಳಿಯ ಯಾವುದೇ ಸದಸ್ಯರು ಈ ಸಮಾರಂಭದಲ್ಲಿ ಕಾಣಿಸಿಕೊಳ್ಳದಿರುವುದರಿಂದ ಪಿಸಿಬಿ ವಿರುದ್ಧ ಐಸಿಸಿ ಕಠಿಣ ಕ್ರಮ ಕೈಗೊಂಡರೂ ಅಚ್ಚರಿಪಡಬೇಕಿಲ್ಲ.



Related Articles

Leave a Reply

Your email address will not be published. Required fields are marked *

Back to top button